ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಚಿವರಾಗಿ ಇಬ್ಬರು ಪ್ರಮಾಣ ವಚನ

ಬೆಂಗಳೂರು:ನಿರೀಕ್ಷೆಯಂತೆ ರಾಜ್ಯ ‘ಮೈತ್ರಿ’ ಸರಕಾರದ ಸಚಿವ ಸಂಪುಟ ಶುಕ್ರವಾರ ಮಧ್ಯಾಹ್ನ ವಿಸ್ತರಣೆಗೊಂಡಿದ್ದು, ಪಕ್ಷೇತರ ಶಾಸಕರಿಬ್ಬರು ಸಚಿವರಾಗಿದ್ದಾರೆ.

ರಾಣೆಬೆನ್ನೂರು ಕ್ಷೇತ್ರದ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ(ಕೆಪಿಜೆಪಿ)ಯ ಶಾಸಕ ಆರ್.ಶಂಕರ್ ಹಾಗೂ ಮುಳುಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಇಬ್ಬರು ಕೂಡಾ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಪ್ರಮಾಣವಚನ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ‌, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಶಾಸಕರು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೂರನೇ ಸ್ಥಾನ ಭರ್ತಿ ಮಾಡುವ ಬಗ್ಗೆ ಜೆಡಿಎಸ್ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲದ ಕಾರಣ ಆ ಪಕ್ಷದ ಒಂದು ಸ್ಥಾನವನ್ನು ಖಾಲಿ ಉಳಿಸಿಕೊಳ್ಳಲಾಗಿದೆ.

ಕಾಂಗ್ರೆಸ್ ಸೇರಲು ನಿರ್ಧರಿಸಿದ ಶಂಕರ್: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಶಂಕರ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರುವ ನಿರ್ಧಾರಕ್ಕೆ ಬಂದಿದ್ದಾರೆ. ಸಿದ್ದರಾಮಯ್ಯರನ್ನು ಭೇಟಿಯಾದ ಅವರು ತನ್ನ ಪಕ್ಷವಾದ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ(ಕೆಪಿಜೆಪಿ)ಯನ್ನುಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಳಿಸುವ ಪತ್ರವನ್ನು ಸಲ್ಲಿಸಿದ್ದಾರೆ.

Be the first to comment

Leave a Reply

Your email address will not be published.


*